ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ.ಕ.ಮಂಗಳೂರು ಆಶ್ರಯದಲ್ಲಿ ಅ.28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿರುವ ‘ವಿಶ್ವ ಬಂಟರ ಸಮ್ಮೇಳನ -2023’ (ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ) ಆಮಂತ್ರಣ ಪತ್ರಿಕೆಯ ಬಿಡುಗಡೆ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಶುಕ್ರವಾರ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ಮಾತನಾಡಿ, ಬಂಟ ಸಮುದಾಯದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಹಾಯವಾಗುವ ನಿಟ್ಟಿನಲ್ಲಿ ಯೋಚಿಸಿ ಯೋಜನೆಗಳನ್ನು ರೂಪಿಸಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಲು ವಿವಿಧ ಕೋರ್ಸ್ ಗಳಿಗೆ ಪೂರಕವಾದ ತರಬೇತಿ ಕೇಂದ್ರಗಳನ್ನು ತೆರೆಯುವ ಕೈಂಕರ್ಯವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಾಡಬೇಕಾಗಿದೆ ಎಂದರು.
ರಾಜ್ಯ ಮೀಸಲಾತಿಯ 3 ಬಿ ಪಟ್ಟಿಯಲ್ಲಿ ಬಂಟರಿಗೂ ಮೀಸಲಾತಿ ಸೌಲಭ್ಯ ಪಡೆಯಲು ಅವಕಾಶವಿದೆ. ಈ ಮಾನದಂಡದಡಿ ಅರ್ಜಿ ಸಲ್ಲಿಸಿದರೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸೌಲಭ್ಯ ಪಡೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಬಂಟರ ಸಂಘಗಳ ಒಕ್ಕೂಟ ಕಾರ್ಯ ಪ್ರವೃತವಾಗಬೇಕು ಎಂದವರು ಶುಭ ಹಾರೈಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ ಮಾತಾನಾಡಿದರು. ಸಾಂಸ್ಕೃತಿಕ ಸಂಚಾಲಕ ಚಂದ್ರಹಾಸ ಡಿ. ಶೆಟ್ಟಿ ಕ್ರೀಡಾಸ್ವರ್ಧೆಗಳ ಕುರಿತು ಕ್ರೀಡಾ ಸಹಸಂಚಾಲಕ ಡಾ. ರೋಶನ್ ಕುಮಾರ್ ಶೆಟ್ಟಿ ವಿವರಿಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಶಿವಪ್ರಸಾದ ಹೆಗ್ಡೆ, ಸಹಸಂಚಾಲಕ ದಿನೇಶ ಹೆಗ್ಡೆ, ನಿಕಟಪೂರ್ವ ಸಂಚಾಲಕ ಜಯರಾಜ್ ಹೆಗ್ಡೆ, ಉಡುಪಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಪಿ. ಶೆಟ್ಟಿ, ಆರೂರು ಶ್ರೀಧರ ಶೆಟ್ಟಿ, ಮನೋಹರ ಎಸ್. ಶೆಟ್ಟಿ, ಸುಧೀರ್ ಕುಮಾರ್ ಶೆಟ್ಟಿ, ದಿವಾಕರ್ ಶೆಟ್ಟಿ ಕೊಡವೂರು, ಡಾ. ಭಾಸ್ಕರ ಶೆಟ್ಟಿ ಬೆಳ್ಳೆ, ಕಾಪು ಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಕಾಪು, ನವೀನ್ ಚಂದ್ರ ಶೆಟ್ಟಿ ಪಡುಬಿದ್ರಿ ಉಪಸ್ಥಿತರಿದ್ದರು. ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿ ವಂದಿಸಿದರು. ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು.