ಜಿಲ್ಲೆಯ ಕ್ರೀಡಾಪಟುಗಳಿಗೆ ಸಹಾಯ ಮತ್ತು ತರಬೇತಿ ನೀಡುವ ಮೂಲಕ ಅವರನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುವುದು ನಮ್ಮ ಕರ್ತವ್ಯ. ರಾಜಕೀಯ ರಹಿತವಾಗಿ ಕ್ರೀಡೆ ಮೇಲೆ ಅಭಿಯಾನ ಇಟ್ಟುಕೊಂಡು ಮುಂದೆ ಸಾಗಬೇಕು ಎಂದು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಪೂರ್ವಾಧ್ಯಕ್ಷ ಅಶೋಕ್ ಅಡ್ಯಂತಾಯ ಹೇಳಿದರು. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಬೆಳ್ಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, 1999 ರಲ್ಲಿ ಆರಂಭವಾದ ಸಂಸ್ಥೆ ಇಂದಿನವರೆಗೆ ಎರಡು ರಾಷ್ಟ್ರೀಯ ಮಟ್ಟದ, ಐದು ರಾಜ್ಯ ಮಟ್ಟದ ಹಾಗೂ ಹಲವಾರು ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸಿದೆ. ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ನೂರಾರು ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ತರಬೇತಿ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಭಾರತಕ್ಕೆ ಉತ್ತಮ ಕ್ರೀಡಾಪಟುಗಳನ್ನು ನೀಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೂರ್ವಾಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ ಕೊಕ್ಕರ್ಣೆ, ರಘುರಾಮ್ ನಾಯಕ್, ಅಶೋಕ ಅಡ್ಯಂತಾಯ ಮತ್ತು ಡಾ. ಕೆಂಪರಾಜು ಇವರನ್ನು ಗೌರವಿಸಲಾಯಿತು. ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಎಂ. ಚಂದ್ರಶೇಖರ್ ಹೆಗ್ಡೆ ಉಪಸ್ಥಿತರಿದ್ದರು. ಕಾರ್ಯದರ್ಶಿ ದಿನೇಶ್ ಕುಮಾರ್ ಸ್ವಾಗತಿಸಿ, ಡಾ. ರಾಮಚಂದ್ರ ಪಾಟ್ಕರ್ ಕಾರ್ಯಕ್ರಮ ನಿರ್ವಹಿಸಿದರು.