ಚಿಕ್ಕ ಮಕ್ಕಳ ಜತೆ ಮಕ್ಕಳಂತೆ ಬೆರೆತು ಆಟದ ಜತೆಗೆ ಶಾಲೆಯ ಚಟುವಟಿಕೆಗಳ ಬಗ್ಗೆ ಚರ್ಚಿಸಬೇಕು. ಈ ನಿಟ್ಟಿನಲ್ಲಿ ಮಕ್ಕಳ ಬೆನ್ನು ತಟ್ಟುವ ಕೆಲಸ ಮಾಡಬೇಕು. ಆಗ ವಿದ್ಯಾರ್ಥಿಗಳು ಮೊಬೈಲ್ ಕಡೆಗೆ ಹೆಚ್ಚು ಗಮನ ಕೊಡದೆ ಕ್ರಿಯಾಶೀಲ ಚಿಂತನೆಗೆ ಅವಕಾಶ ಕಲ್ಪಿಸಿದಂತಾಗುವುದು ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂದನಾ ರೈ ಕಾರ್ಕಳ ಅವರು ಹೇಳಿದರು. ಮಾ. 12ರಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಯಡಾಡಿ ಮತ್ಯಾಡಿ, ಕುಂದಾಪುರ ಇವರ ವತಿಯಿಂದ ಕಿಂಡರ್ ಗಾರ್ಡನ್ ವಿದ್ಯಾರ್ಥಿಗಳ ಪದವಿ ಘಟಿಕೋತ್ಸವ ಸಮಾರಂಭ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಪಾಲಕರು ಮತ್ತು ಶಿಕ್ಷಕರು ಜತೆಯಾಗಿ ಮಗುವಿನ ಪಠ್ಯ ಹಾಗೂ ಪಕ್ಷೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಣೆ ಮಾಡಿದಾಗ ಮಗುವಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಇದರ ಕಾರ್ಯದರ್ಶಿ ಭರತ್ ಶೆಟ್ಟಿ ಮಾತನಾಡಿ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ಕೊಡುವುದರ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಪೋಷಕರ ನಿರೀಕ್ಷೆಯನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗುಣಾತ್ಮಕ ಶಿಕ್ಷಣದ ಜತೆಗೆ ಬೇರೆ ಬೇರೆ ಯೋಚನೆಗಳನ್ನು ಹಾಗೂ ಯೋಜನೆಗಳನ್ನು ಆಡಳಿತ ಮಂಡಳಿ ಹಮ್ಮಿಕೊಂಡಿದೆ ಎಂದರು.
.ಕಾರ್ಯಕ್ರಮದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ಹಾಗೂ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ. ಸ್ವಾಗತಿಸಿದರು. ಶಿಕ್ಷಕಿ ಅರ್ಚನಾ ನಿರೂಪಿಸಿ, ಶಿಕ್ಷಕಿ ದಿಕ್ಷಾ ವಂದಿಸಿದರು.

ಸಂಪನ್ಮೂಲ ವ್ಯಕ್ತಿ ವಂದನಾ ರೈ ಪೋಷಕರಿಗೆ ಮತ್ತು ಮಕ್ಕಳಿಗೆ ನೃತ್ಯ ಪೋಷಕರಿಗೆ ಮತ್ತು ಆಟೋಟ ಸ್ಪರ್ಧೆಯನ್ನು ನಡೆಸಿಕೊಟ್ಟರು. ಬಳಿಕ ಪುಟಾಣಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು.








































































































