
ಪ್ರಕೃತಿ ಚಿಕಿತ್ಸೆ ಹಾಗೂ ಸಮಗ್ರ ಸ್ವಾಸ್ಥ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಆಳ್ವಾಸ್ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಅವರು ಪ್ರತಿಷ್ಠಿತ ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ABRSM – KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿಸಿರುವ ‘ಅಬ್ಬಕ್ಕ 500 – ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ’ ಕಾರ್ಯಕ್ರಮದ ಅಂಗವಾಗಿ ಈ ಗೌರವ ಪುರಸ್ಕಾರವನ್ನು ನೀಡಲಾಗುತ್ತಿದೆ. ಸಮಾಜಮುಖಿ ಕಾರ್ಯಗಳು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಡಾ. ಗ್ರೀಷ್ಮಾ ವಿವೇಕ್ ಆಳ್ವ ಅವರು ಪ್ರಕೃತಿ ಚಿಕಿತ್ಸೆ, ಆಯುರ್ವೇದ ಹಾಗೂ ಸಮಗ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಆಯಾಮಗಳನ್ನು ಪರಿಚಯಿಸುವುದರೊಂದಿಗೆ ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ಪರಿಸರ ಸ್ನೇಹಿ ಜೀವನಶೈಲಿ, ಸುಸ್ಥಿರ ಆರೋಗ್ಯ ಪದ್ಧತಿಗಳು ಹಾಗೂ ಮಹಿಳಾ ಸಬಲೀಕರಣಕ್ಕೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.





















































































































