

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ. ಉದಯ್ ಶೆಟ್ಟಿ ಮುನಿಯಾಲು ಮಾತನಾಡಿ, ‘ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರಕಾರದ ವತಿಯಿಂದ ತುಳು ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಬೇಕೆಂದು ಸಿ.ಎಂಗೆ ಮನವಿ ಸಲ್ಲಿಸಿದ್ದೇನೆ’ ಎಂದರು.



ತುಳು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃ ಭಾಷೆಯಾಗಿದೆ. ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಅವಿಭಾಜ್ಯ ಅಂಗ ತುಳು. ಜಾಗತೀಕರಣದ ಪರಿಣಾಮ ಪ್ರಾದೇಶಿಕ ಭಾಷೆಗಳ ಬಳಕೆ ಕಡಿಮೆಯಾಗುತ್ತಿರುವ ಸಂದರ್ಭ ತುಳು ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯತೆ ಹೆಚ್ಚಾಗಿದೆ ಎಂದರು.





























































































































