ಕುಂದಾಪುರ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ಆ್ಯಂಟಿ ರ್ಯಾಗಿಂಗ್ ಮತ್ತು ಆ್ಯಂಟಿ ಡ್ರಗ್ಸ್ ಅವೇರ್ನೆಸ್ ಸೆಲ್ ವತಿಯಿಂದ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಕಾಲೇಜಿನಲ್ಲಿ ನೆಡೆಯಿತು. ಯುವಜನತೆ ದೇಶದ ಅಮೂಲ್ಯ ಸಂಪತ್ತು. ವಿದ್ಯಾರ್ಥಿ ಜೀವನವು ಭವಿಷ್ಯದ ಬದುಕಿಗೆ ಭದ್ರ ಬುನಾದಿಯಾಗಿದ್ದು, ಈ ಹಂತದಲ್ಲಿ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವ್ಯಸನವು ವ್ಯಕ್ತಿಯ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಗಂಭೀರ ಸಮಸ್ಯೆಯಾಗಿದ್ದು, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ವಿರುದ್ಧ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕುಂದಾಪುರದ ವಕೀಲರಾದ ಉಮೇಶ್ ಶೆಟ್ಟಿ ಶಾನ್ಕಟ್ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ| ಕೆ ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದರು. ಈ ಸಂದರ್ಭದಲ್ಲಿ ಆ್ಯಂಟಿ ರ್ಯಾಗಿಂಗ್ ಮತ್ತು ಆ್ಯಂಟಿ ಡ್ರಗ್ಸ್ ಅವೇರ್ನೆಸ್ ಸೆಲ್ನ ಸಂಯೋಜಕಿ ವಿಲ್ಮಾ ಶೆರಲ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಸ್ವಾಗತಿಸಿದರು. ವಿದ್ಯಾರ್ಥಿ ಅಭಿಷೇಕ್ ಪ್ರಾರ್ಥಿಸಿ, ನಂದಿತಾ ವಂದಿಸಿ, ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.





















































































































