ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಧನಾತ್ಮಕ ಚಿಂತನೆ ಬೆಳೆಯುತ್ತದೆ. ಸಹಾಯ, ಸಹಕಾರಗಳು ಸಾಧ್ಯವಾಗುವುದು ಇಂತಹ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಶಿಕ್ಷಣದ ನಿಜವಾದ ಅರ್ಥವನ್ನು ಅರ್ಥೈಸಿಕೊಳ್ಳಿ ಎಂದು ಅರಣ್ಯ ಗುತ್ತಿಗೆದಾರ, ಉದ್ಯಮಿ ಜಯಪ್ರಕಾಶ್ ಶೆಟ್ಟಿ ಕಟ್ಕೇರಿ ಹೇಳಿದರು. ಅವರು ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ʼಉಗಮ -2026ʼನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಕಾಸ್ ಶೆಟ್ಟಿ, ಎಸ್ಕ್ಯೂಎಸಿ ಪ್ರತಿನಿಧಿ ಖುಷಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಅಭಿಷೇಕ್, ಕ್ರೀಡಾ ಕಾರ್ಯದರ್ಶಿ ನಿಶಾಂತ್ ಡಿಸೋಜ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ತನುಜಾ ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ಸಂಯೋಜಕಿ ಶ್ರೀಮತಿ ರೇಷ್ಮಾ ಶೆಟ್ಟಿ ವಂದಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶಾನುಭೋಗ್ ನಿರೂಪಿಸಿದರು. ವಿದ್ಯಾರ್ಥಿ ಆದಿತ್ಯ ಪ್ರಾರ್ಥಿಸಿದರು.





















































































































