ಜೀವನ ಎಂಬ ದೋಣಿಗೆ ಸೂಕ್ತ ದಿಗ್ಸೂಚಿಯ ಅಗತ್ಯತೆ ಇದ್ದು, ಇತರರ ಸಲಹೆ ಸೂಚನೆ ಪಡೆದು ವಿದ್ಯಾರ್ಜನೆ ಗಳಿಸಿದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಹೈದರಾಬಾದ್ ಬಂಟರ ಸಂಘದ ಮಾಜಿ ಅಧ್ಯಕ್ಷ ರತ್ನಾಕರ ರೈ ಅವರು ಹೇಳಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದಿಕ್ಸೂಚಿ ಭಾಷಣ ಮಾಡಿದ ರಾಮಕೃಷ್ಣ ಪದವಿ ಕಾಲೇಜ್ ನ ಪ್ರಾಂಶುಪಾಲ ಪ್ರೊ ಬಾಲಕೃಷ್ಣ ಶೆಟ್ಟಿ ಅವರು ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ವಿಷಯಗಳಲ್ಲೂ ಸಕ್ರಿಯರಾಗಿದ್ದರೆ ಸಮಗ್ರ ವ್ಯಕ್ತಿತ್ವದ ಬೆಳವಣಿಗೆಯಾಗುತ್ತದೆ ಎಂದರು.
ಮುಖ್ಯ ಅತಿಥಿ ಒಡಿಯೂರು ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ರೈ ಮಾತನಾಡಿ ವಿದ್ಯಾರ್ಥಿಗಳು ದೂರದರ್ಶಿತ್ವ ಹೊಂದಿ, ಸತತ ಪರಿಶ್ರಮ ಪಡೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ರತ್ನಾಕರ ರೈ ದಂಪತಿಗಳನ್ನು, ಪ್ರೊ ಬಾಲಕೃಷ್ಣ ಶೆಟ್ಟಿ ಹಾಗೂ ಸುರೇಶ್ ರೈ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರ ಪಡೆದ ನಿಧಿಶ್ರೀ ಶೆಟ್ಟಿ ಹಾಗೂ ಮಹತಿ ಶೆಟ್ಟಿ ಅನಿಸಿಕೆ ವ್ಯಕ್ತಪಡಿಸಿದರು. ಬಂಟರ ಯಾನೆ ನಾಡವರ ಮಾತೃಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಉಮೇಶ್ ರೈ ಪದವು ಮೇಗಿನಮನೆ, ಮುರಳೀಧರ ಶೆಟ್ಟಿ, ರವೀಂದ್ರನಾಥ ರೈ, ಜಯರಾಯ ಸಾಂತ, ಆನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಸಮಿತಿಯ ಸಹ ಸಂಚಾಲಕ ರತ್ನಾಕರ ಶೆಟ್ಟಿ ಎಕ್ಕಾರ್ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ಮತ್ತು ಕಿರಣ್ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು. ಸುಲತಾ ಶೆಟ್ಟಿ ಸಹಕರಿಸಿದರು.