ಬ್ರಹ್ಮಾವರ ನ. 09: ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಕ್ಕಳ ಸುರಕ್ಷತೆಯ ಕುರಿತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೆಲ್ತ್ ಆಂಡ್ ಎಮೋಶನ್ ಗ್ರೂಪ್ನ ಸ್ಥಾಪಕರಾದ ಡಾ. ರಾಜಲಕ್ಷ್ಮೀ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಅವರು ಮಕ್ಕಳು ಇಂದು ಎದುರಿಸುತ್ತಿರುವ ಸಮಸ್ಯೆಗಳು, ಮೊಬೈಲ್ ಬಳಕೆಯ ದುಷ್ಪರಿಣಾಮಗಳು, ಮಕ್ಕಳ ಸುರಕ್ಷತೆಯ ಕುರಿತು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು.
ನಂತರ ಮಕ್ಕಳು ವೈದ್ಯೆಯೊಂದಿಗೆ ಮುಕ್ತವಾಗಿ ಚರ್ಚಿಸಿ ತಮ್ಮ ಗೊಂದಲಗಳಿಗೆ ಪರಿಹಾರ ಕಂಡುಕೊಂಡರು. ಶಾಲಾ
ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ನಮಗೆ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ, ಆರ್ಥಿಕ, ಬೌದ್ಧಿಕ, ಸಾಮಾಜಿಕ ಸ್ವಾಸ್ಥ್ಯದ ಅರಿವಿರಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಅತಿವೇಗವಾಗಿ ಬೆಳೆಯುತ್ತಿರುವ ಇಂದಿನ ವಿದ್ಯಮಾನಗಳಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸಬಹುದು. ಆದ್ದರಿಂದ ವಿದ್ಯಾರ್ಥಿಗಳಿಗೆ ತಮ್ಮ ನಿರ್ದಿಷ್ಟ ಗುರಿಯನ್ನು ತಲುಪಲು ಸರಿಯಾದ ಮಾರ್ಗದರ್ಶನ, ಮಾಹಿತಿಗಳ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಜಿ ಎಮ್ ಇಂತಹ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದೆ ಎಂದರು. ಕಾರ್ಯಕ್ರಮದಲ್ಲಿ ವೆಂಕಟ್, ಶಾಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.