ನಾಲ್ಕು ದಶಕಗಳಿಗೂ ಅಧಿಕ ಸಮಯದಿಂದ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ, ಕಳೆದ ವರ್ಷ 2023 ರಲ್ಲಿ ಸಹಕಾರ ಕ್ಷೇತ್ರದ ಮಹೋನ್ನತ ಗೌರವವಾದ ‘ಸಹಕಾರ ರತ್ನ’ ಪ್ರಶಸ್ತಿ ಪಡೆದ ಜಯಕರ ಶೆಟ್ಟಿ ಇಂದ್ರಾಳಿ ಅವರು ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಜಯಕರ ಶೆಟ್ಟಿ ಇಂದ್ರಾಳಿ ಅವರು ಶತಮಾನೋತ್ಸವನ್ನು ಯಶಸ್ವಿಯಾಗಿ ಪೂರೈಸಿರುವ ಉಡುಪಿಯ ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಕಳೆದ 42 ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದು, ಇದನ್ನು ಅದನ್ನು ಜಿಲ್ಲೆಯ ಯಶಸ್ವಿ ಸಹಕಾರಿ ಸಂಸ್ಥೆಯಾಗಿ ಜನಮನದಲ್ಲಿ ಪ್ರತಿಷ್ಠಾಪಿಸಿದ್ದಾರೆ. 1918ರಲ್ಲಿ ಸ್ಥಾಪನೆಗೊಂಡ ಈ ಸೊಸೈಟಿ, 1978ರಿಂದ 1981ರವರೆಗೆ ವ್ಯವಹಾರ ಸ್ಥಗಿತಗೊಂಡು ಮುಚ್ಚುವ ಸ್ಥಿತಿಯಲ್ಲಿದ್ದು, ಸರಕಾರದ ಆಡಳಿತಾಧಿಕಾರಿಗಳ ಕಾಲದಿಂದ ವಿವಿಧ ಹುದ್ದೆಗಳ ಮೂಲಕ ಅದಕ್ಕೊಂದು ಹೊಸ ಆಯಾಮ ದೊರಕಿಸಿಕೊಟ್ಟು ಅದೊಂದು ಬೃಹತ್ ಸಂಸ್ಥೆಯಾಗಿ ಬೆಳೆಯಲು ಕಾರಣೀಭೂತರಾಗಿದ್ದಾರೆ.
ಶಿವಳ್ಳಿ ಗ್ರಾಮದ ಇಂದ್ರಾಳಿಯ ಪ್ರತಿಷ್ಠಿತ ಕೃಷಿಕ ಬಂಟ ಮನೆತನದಲ್ಲಿ ಜನಿಸಿದ ಜಯಕರ ಶೆಟ್ಟಿ ಇಂದ್ರಾಳಿ ಅವರು ಸಹಕಾರಿ ಕ್ಷೇತ್ರಕ್ಕೆ ಮಾತ್ರ ಸೀಮಿತರಾಗದೇ, ಶೈಕ್ಷಣಿಕ, ಸಾಹಿತ್ಯಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೂ ತಮ್ಮ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದಾರೆ. ಸದ್ಯ ಅವರು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಪಟ್ಲ ಫೌಂಡೇಶನ್ ಉಡುಪಿ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.