ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಗಿರುವ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ರಜತ ಮಹೋತ್ಸವದ ಪ್ರಯುಕ್ತ ಹೆಜಮಾಡಿಯ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ತಂಡ ಪ್ರಶಸ್ತಿ ಗೆದ್ದುಕೊಂಡಿದೆ. ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ, ಕಾಪು, ಕಾರ್ಕಳ, ಕುಂದಾಪುರ ಹಾಗೂ ಬ್ರಹ್ಮಾವರ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಉಡುಪಿ ಮತ್ತು ಕುಂದಾಪುರ ತಂಡಗಳು ಅತೀ ಹೆಚ್ಚು ಅಂಕಗಳನ್ನು ಗಳಿಸಿ ಫೈನಲ್ ಪ್ರವೇಶಿಸಿದರು. ಅಂತಿಮ ಪಂದ್ಯದಲ್ಲಿ ಉಡುಪಿ ತಂಡವು ಕುಂದಾಪುರ ತಂಡವನ್ನು ಐದು ರನ್ ಗಳಲ್ಲಿ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಯತೀಶ್ ತಿಂಗಳಾಯ, ಸಂತೋಷ್ ಕುಂದೇಶ್ವರ, ಹರೀಶ್ ಕುಂದಾಪುರ, ರಾಘವೇಂದ್ರ ಅವರು ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು.
ಪಂದ್ಯಾಟ ಉದ್ಘಾಟನೆ: ಪಂದ್ಯಾಕೂಟವನ್ನು ಪಡುಬಿದ್ರೆಯ ಆಸ್ಪೆನ್ ಇನ್ಫಾ ಸಂಸ್ಥೆಯ ಮಹಾ ಪ್ರಬಂಧಕ ಅಶೋಕ್ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಮಾತನಾಡಿದರು. ಕಾಪು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಜೆ.ಶೆಟ್ಟಿ, ಉದ್ಯಮಿ ದೀಪಕ್ ಕುಮಾರ್ ಎರ್ಮಾಳು, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮಾತನಾಡಿದರು. ವಿನೋದ್ ಸಾಲ್ಯಾನ್ ಬೆಳ್ಳಾಯರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.
ಉಡುಪಿ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಕಾರ್ಯದರ್ಶಿ ನಝೀರ್ ಪೊಲ್ಯ, ತಾಲೂಕು ಸಂಘದ ಕಾರ್ಯದರ್ಶಿ ಸಂತೋಷ್ ಕಾಪು, ಕೋಶಾಧಿಕಾರಿ ಹೇಮನಾಥ್ ಪಡುಬಿದ್ರೆ, ಹೆಜಮಾಡಿ ಗ್ರಾಂ.ಪಂ ಅಧ್ಯಕ್ಷೆ ರೇಷ್ಮಾ ಮೆಂಡನ್, ರಜತ ಮಹೋತ್ಸವ ಸಮಿತಿಯ ಸಂಚಾಲಕ ಮಹಮ್ಮದ್ ಶರೀಫ್ ಕಾರ್ಕಳ, ಸಾಮಾಜಿಕ ಕಾರ್ಯಕರ್ತ ಶೇಖರ್ ಹೆಜಮಾಡಿ ಉಪಸ್ಥಿತರಿದ್ದರು. ಹರೀಶ್ ಹೆಜಮಾಡಿ ಸ್ವಾಗತಿಸಿದರು. ಕಾಪು ತಾಲೂಕು ಸಂಘದ ಕ್ರೀಡಾ ಸಂಚಾಲಕ ರಾಕೇಶ್ ಕುಂಜೂರು ಕಾರ್ಯಕ್ರಮ ನಿರ್ವಹಿಸಿದರು. ಸಂತೋಷ್ ಕಾಪು ವಂದಿಸಿದರು.