ನಾಟಕಗಳು ಜನಮಾನಸ ತಲುಪುವಲ್ಲಿ ಕಲಾವಿದರ ಪಾತ್ರ ಅತೀ ಮುಖ್ಯವಾಗಿದ್ದು, ರಂಗಭೂಮಿ ಬೆಳೆಯಲು ಪ್ರೇಕ್ಷಕರ ಪ್ರೋತ್ಸಾಹ ಅಗತ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಎಂಜಿಎಂ ಕಾಲೇಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವರಂಗಭೂಮಿ ದಿನಾಚರಣೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
4 ದಶಕಗಳ ಹಿಂದೆ ರಂಗ ಚಟುವಟಿಕೆಗಳಲ್ಲಿ ಮಹಿಳೆಯರು ಅತೀ ವಿರಳ ಸಂಖ್ಯೆಯಲ್ಲಿದ್ದ ಸಂದರ್ಭದಲ್ಲಿ ಡಾ. ಮಾಧವಿ ಭಂಡಾರಿಯವರು ನಾಟಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದು, ಇಂದಿನ ಯುವ ಜನತೆಗೆ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು. ಕಮಲಾಬಾಯಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಸುದರ್ಶನ ನಾಯಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ರಂಗಕರ್ಮಿ, ಪಿಪಿಸಿ ನಿವೃತ್ತ ಪ್ರಾಂಶುಪಾಲೆ ಡಾ. ಮಾಧವಿ ಎಸ್. ಭಂಡಾರಿ ಅವರನ್ನು ಸನ್ಮಾನಿಸಲಾಯಿತು. ಕಲಾವಿದ ರಾಘವೇಂದ್ರ ರಾವ್, ರಂಗಭೂಮಿ ಉಪಾಧ್ಯಕ್ಷ ರಾಜ್ ಗೋಪಾಲ್ ಉಪಸ್ಥಿತರಿದ್ದರು. ವಿವೇಕಾನಂದ ಎನ್. ರಂಗಭೂಮಿ ಸಂದೇಶ ವಾಚಿಸಿದರು. ಅಮಿತಾಂಜಲಿ ಸನ್ಮಾನಿತರನ್ನು ಪರಿಚಯಿಸಿದರು. ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು ಸ್ವಾಗತಿಸಿ, ಪೂರ್ಣಿಮಾ ಸುರೇಶ್ ಕಾರ್ಯಕ್ರಮ ನಿರೂಪಿಸಿದರು.