ಆಧುನಿಕ ಕಾಲಘಟ್ಟದಲ್ಲಿ ಎಲ್ಲವೂ ವ್ಯಾಪಾರೀಕರಣಗೊಳ್ಳುತ್ತಿದ್ದು ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳೂ ಇದರಿಂದ ಹೊರತಾಗಿಲ್ಲ. ಹೀಗಾಗಿ ಇಂದಿನ ದಿನಗಳಲ್ಲಿ ಮೌಲ್ಯಯುತ ಶಿಕ್ಷಣ ಎಲ್ಲಿ ದೂರವಾಗುತ್ತದೋ ಎಂಬ ಆತಂಕ ಎದುರಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಹೇಳಿದರು. ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಸಂವಾದ ನಡೆಸಿದರು.
ಸುಮಾರು ಇಪ್ಪತ್ತು ವರ್ಷಗಳ ಕಾಲ ಹಾಸ್ಟೆಲ್ ನಲ್ಲಿದ್ದುಕೊಂಡು ಕಲಿತ ಬಗ್ಗೆ ಸ್ವ ಅನುಭವ ಹೇಳಿದ ಡಾ ಮೋಹನ್ ಆಳ್ವ, ಹಾಸ್ಟೆಲ್ ನಲ್ಲಿ ವಿದ್ಯೆ ಜೊತೆ ಕ್ರೀಡೆ ಸಾಂಸ್ಕೃತಿಕಕ್ಕೂ ಒತ್ತು ನೀಡಲು ಸಾಧ್ಯವಾಗುತ್ತದೆ ಎಂಬುದು ನನ್ನ ಅನುಭವ. ಅದಕ್ಕಾಗಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಹಾಸ್ಟೆಲ್ ಸಹಿತ ಶಿಕ್ಷಣಕ್ಕೆ ಒತ್ತು ನೀಡಿದ್ದೇನೆ ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ಉಪಸ್ಥಿತರಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿಬಿ ಹರೀಶ್ ರೈ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಯಸ್ಥಳ ವಂದಿಸಿದರು. ಆರ್ ಸಿ ಭಟ್ ಕಾರ್ಯಕ್ರಮ ನಿರೂಪಿಸಿದರು.