ದ.ಕ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದೆಹಲಿಯಲ್ಲಿ ಕೇಂದ್ರದ ಹಲವು ಸಚಿವರುಗಳನ್ನು ಭೇಟಿಯಾಗಿ ದ.ಕ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮತ್ತು ಕ್ಷೇತ್ರದ ಬೇಡಿಕೆಗಳು, ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಸಲ್ಲಿಸಿದರು.
ದ.ಕ ಲೋಕಸಭಾ ಕ್ಷೇತ್ರದಿಂದ ಪ್ರಥಮ ಬಾರಿ ಸಂಸದರಾಗಿ ಚುನಾಯಿತರಾಗಿರುವ ಮಾಜಿ ಸೈನಿಕರೂ ಆಗಿರುವ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲೆಂದು ದೆಹಲಿಗೆ ತೆರಳಿದ್ದಾಗ ಕೇಂದ್ರದ ವಿವಿಧ ಖಾತೆಗಳ ಸಚಿವರನ್ನು, ರಾಜ್ಯ ಸಚಿವರನ್ನು ಭೇಟಿಯಾಗಿ ಕ್ಷೇತ್ರದ ಸಮಸ್ಯೆಗಳು ಮತ್ತು ಜನರ ಬೇಡಿಕೆಗಳ ಕುರಿತು ಪ್ರಸ್ತಾಪಿಸಿ, ಹೆಚ್ಚಿನ ಅನುದಾನಕ್ಕೆ ಬೇಡಿಕೆ ಸಲ್ಲಿಸಿದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ವಿಮಾನ ಯಾನ ಸಚಿವ ರಾಮ್ ಮೋಹನ್ ನಾಯ್ಡು, ಬೃಹತ್ ಕೈಗಾರಿಕೆಗಳ ಸಚಿವ ಹೆಚ್. ಡಿ. ಕುಮಾರಸ್ವಾಮಿ, ಪೆಟ್ರೋಲಿಯಂ ಖಾತೆ ಸಚಿವ ಹರ್ ದೀಪ್ ಎಸ್ ಪುರಿ, ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಖಾತೆ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಕೇಂದ್ರ ರೈಲ್ವೇ ಖಾತೆ, ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದರು.