ಶಿಕ್ಷಣ ತಜ್ಞ, ಸಂಘಟನಾ ಚತುರ, ತುಂಬೆ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ.ಎನ್ ಗಂಗಾಧರ ಆಳ್ವರಿಗೆ 2024-25 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸ್ವಾತಂತ್ರ್ಯ ಪೂರ್ವ ಕಾಲದಿಂದಲೇ ಶಿಕ್ಷಕ ವೃತ್ತಿಯಲ್ಲಿದ್ದ ಕುಟುಂಬದಲ್ಲಿ ಜನಿಸಿರುವ ಗಂಗಾಧರ ಅಳ್ವರ ತಂದೆ ಕೇಪು ನಾರಾಯಣ ಆಳ್ವ ಹಾಗೂ ತಾಯಿ ಕೇಪು ಸುಶೀಲ ಎನ್ ಆಳ್ವ ತಮ್ಮ ತಂದೆ ಹಾಗೂ ಅಜ್ಜಿ ಶಿಕ್ಷಕರಾಗಿದ್ದರು.
ಪ್ರಾಥಮಿಕ ಶಿಕ್ಷಣವನ್ನು ಅನಂತಾಡಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಿಕ್ಷಣ ಮತ್ತು ಪದವಿ ಪೂರ್ವ ಕಾಲೇಜನ್ನು ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿ ಪೂರೈಸಿದರು. ಪದವಿ ಶಿಕ್ಷಣವನ್ನು ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿ ಮಂಗಳೂರು ವಿಶ್ವವಿದ್ಯಾನಿಲಯದಿಂದ 1966ರಲ್ಲಿ ಅರ್ಥಶಾಸ್ತ್ರದ ಸ್ನಾತಕೋತ್ತರ ಪದವಿಯನ್ನು ಪಡೆದರು. ಬಿ.ಎಡ್. ಪದವಿಯನ್ನು ಅಣ್ಣಾಮಲೈ ವಿ.ವಿ.ಯಿಂದ ಪಡೆದು ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಸಾಮಾಜಿಕ, ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಯ ಪಥದತ್ತ ಸಾಗಿಸಿ ದಕ್ಷಿಣ ಕನ್ನಡ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರ ಸ್ಥಾನವನ್ನು ಅಲಂಕರಿಸುವಂತೆ ಮಾಡಿತು. ಸಂಘಟನಾ ಚತುರರಾಗಿ ವಿಭಿನ್ನ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಾಹಿತ್ಯಕ, ಸಾಮಾಜಿಕ ಸಂಘಟನೆಗಳೊಂದಿಗೆ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೂ ಕಾರಣರಾಗಿದ್ದಾರೆ.
ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಆಳ್ವರ ಸಾಧನೆಗೆ ಹಲವಾರು ಸಂಘ ಸಂಸ್ಥೆಗಳು ಗೌರವಿಸಿ ಅಭಿನಂದಿಸಿದೆ. ಅವರ ಶೈಕ್ಷಣಿಕ ಸಾಧನೆಯನ್ನು ಪರಿಗಣಿಸಿದ ಸರ್ಕಾರ 2024 ರ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.