ಯಕ್ಷಧ್ರುವ ಪಟ್ಲ ಫೌಂಡೇಶನ್ ಸರಕಾರಿ ಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡಿ, ಮುಂದಿನ ಪೀಳಿಗೆಗೆ ಯಕ್ಷಗಾನ ಕಲೆಯ ಸೊಗಡು ಪಸರಿಸುತ್ತಿರುವುದು ಸಂತೋಷದ ಸಂಗತಿ. ಫೌಂಡೇಶನ್ನಿಂದ ಇಂತಹ ಕೆಲಸಗಳು ನಿರಂತರ ನಡೆಯಲಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಹಾಗೂ ಪ್ರಾದೇಶಿಕ ಘಟಕಗಳ ಸಹಯೋಗದೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮತ್ತು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ಗಂಜಿಮಠದ ಒಡ್ಡೂರು ಫಾರ್ಮ್ನಲ್ಲಿ ಆಯೋಜಿಸಿದ ಯಕ್ಷಧ್ರುವ- ಯಕ್ಷಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.
ಯಕ್ಷಧ್ರುವ ಪಟ್ಲ ಬಂಟ್ವಾಳ ಘಟಕದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಅಧ್ಯಕ್ಷತೆ ವಹಿಸಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪಟ್ಟ ಫೌಂಡೇಶನ್ನ ಪದಾಧಿಕಾರಿ ಪುರುಷೋತ್ತಮ ಭಂಡಾರಿ ಅಡ್ಯಾರು ಸ್ವಾಗತಿಸಿದರು. ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಯಕ್ಷಧ್ರುವ- ಯಕ್ಷಶಿಕ್ಷಣದ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ, ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ ಶೆಟ್ಟಿ ಸರಪಾಡಿ, ಸಲಹಾ ಸಮಿತಿ ಸದಸ್ಯ ಸರಪಾಡಿ ಅಶೋಕ್ ಶೆಟ್ಟಿ ವಿಟ್ಲ ಘಟಕದ ರಾಧಾಕೃಷ್ಣ ಭಂಡಾರಿ ಚೆಲ್ಲಡ್ಕ, ಎಕ್ಕಾರು ಘಟಕದ ಗಿರೀಶ್ ಎಂ. ಶೆಟ್ಟಿ ಕಟೀಲು, ಸಂತೋಷ್ ಶೆಟ್ಟಿ ಶೆಡ್ಡೆ ಮತ್ತಿತರರು ಉಪಸ್ಥಿತರಿದ್ದರು. ವಾಸುದೇವ ಶೆಟ್ಟಿ ನಿರೂಪಿಸಿ, ವಂದಿಸಿದರು.