ಹೆಬ್ರಿಯಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ (8 ರಿಂದ 12ನೇ ತರಗತಿ) ‘ಪ್ರತಿಭಾ ಕಾರಂಜಿ’ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

‘ಕನ್ನಡ ಕವನ ವಾಚನ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಶ್ರೀಶಾಂತ್ ಮತ್ತು ‘ಸಂಸ್ಕೃತ ಧಾರ್ಮಿಕ ಪಠಣ’ದಲ್ಲಿ ಪ್ರಥಮ ಸ್ಥಾನ ಪಡೆದ ಭೂಮಿಕಾ ಕಾರಂತ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು. ʼಕನ್ನಡ ಭಾಷಣʼ ಸ್ಪರ್ಧೆಯಲ್ಲಿ ಸ್ಪೂರ್ತಿ ದ್ವಿತೀಯ ಸ್ಥಾನ ʼಮಿಮಿಕ್ರಿʼಯಲ್ಲಿ ಮಿಥಿಲ್ ತೃತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಬಿ ಶೆಟ್ಟಿ ಅವರು ಹರ್ಷ ವ್ಯಕ್ತಪಡಿಸಿದ್ದು, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

















































































































