
ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ಗೆ ನೂತನ ಸಾರಥಿಯಾಗಿ ಯುವ ನಾಯಕ ಕೆ. ವಿಕಾಸ್ ಹೆಗ್ಡೆ ಅವರನ್ನು ನೇಮಕಾತಿ ಮಾಡಿ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ (ಕೆಪಿಸಿಸಿ) ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ಬದಲಾವಣೆ ಮಾಡುವಂತೆ ಹಲವು ದಿನಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಕೂಗು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿಯವರು ಕೆಪಿಸಿಸಿ ಅಧ್ಯಕ್ಷರಿಗೆ ನೂತನ ಅಧ್ಯಕ್ಷರ ಆಯ್ಕೆಯ ಕುರಿತಂತೆ ಪತ್ರವನ್ನು ಬರೆದಿದ್ದರು ಎಂದು ತಿಳಿದುಬಂದಿದೆ.


ಕಾಂಗ್ರೆಸ್ ಚಟುವಟಿಕೆಗಳಿಗೆ ಶಕ್ತಿ ತುಂಬಬೇಕು ಎನ್ನುವ ಹಿನ್ನೆಲೆಯಲ್ಲಿ ಅಧ್ಯಕ್ಷಗಿರಿಯ ಚುಕ್ಕಾಣಿ ಯಾರಿಗೆ ನೀಡಬೇಕು ಎನ್ನುವುದನ್ನು ಮಾಹಿತಿ ಪಡೆದು ತೀರ್ಮಾನ ಕೈಗೊಂಡಿದ್ದ ಕೆಪಿಸಿಸಿ ಅಧ್ಯಕ್ಷರು ಕಳೆದ ಫೆಬ್ರವರಿ 9 ರಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ವಿಕಾಸ್ ಹೆಗ್ಡೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು.


























































































































