2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ನ ಮಹಾರಾಷ್ಟ್ರ ರಾಜ್ಯಾಧ್ಯಕ್ಷರಾಗಿ ಹಿರಿಯ ಸಮಾಜಸೇವಕ, ಯಶಸ್ವಿ ಸಂಘಟಕ ಹಾಗೂ ಉದ್ಯಮಿ ಹರೀಶ್ ಶೆಟ್ಟಿ ಪಡುಬಿದ್ರಿ ಅವರನ್ನು ನೇಮಕ ಮಾಡಲಾಗಿದೆ. ಮೂಲತಃ ಪಡುಬಿದ್ರಿಯವರಾದ ಹರೀಶ್ ಶೆಟ್ಟಿ ಅವರು ಸಿಂಗರ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಶಾಖಾ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಭಾರತೀಯ ಜೀವ ವಿಮಾ ನಿಗಮದ ಹಿರಿಯ ಸಲಹೆಗಾರರಾಗಿದ್ದಾರೆ. ಕಳೆದ 14 ವರ್ಷಗಳಿಂದ MDRT ಕ್ಲಬ್ ಸದಸ್ಯರಾಗಿರುವ ಅವರು ತುಳುಕೂಟ ಐರೋಲಿ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾಗಿದ್ದು, ಅಧ್ಯಕ್ಷರಾಗಿ ಯಕ್ಷಗಾನ, ನಾಟಕ, ಸಂಗೀತ ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದಾರೆ. ‘ವಿದ್ಯಾನಿಧಿ ಕುಂಭ’ ಯೋಜನೆಯ ಮೂಲಕ ಸುಮಾರು 50 ಲಕ್ಷ ರೂಪಾಯಿ ಸಂಗ್ರಹಿಸಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿದ್ದಾರೆ. ಐರೋಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷರಾಗಿ ಸುಮಾರು 55 ಲಕ್ಷ ರೂಪಾಯಿ ವೆಚ್ಚದಲ್ಲಿ ಸಭಾಭವನ ಹಾಗೂ ಶಿಖರದ ನವೀಕರಣ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಬಂಟರ ಸಂಘ ಮುಂಬಯಿಯ ನವಿ ಮುಂಬಯಿ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷರಾಗಿ ಎರಡು ವರ್ಷಗಳ ಕಾಲ ನಿರ್ವಹಿಸಿ, ಅತ್ಯುತ್ತಮ ಪ್ರಾದೇಶಿಕ ಸಮಿತಿ ಪ್ರಶಸ್ತಿ ದೊರಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಪ್ರಸ್ತುತ ಘನ್ಸೋಲಿ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಲ್ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಸಂಘಟನಾ ಅನುಭವ, ಸಮಾಜಸೇವೆ, ತುಳು ಭಾಷೆ, ಸಂಸ್ಕೃತಿ ಮತ್ತು ಸಮುದಾಯದ ಅಭಿವೃದ್ಧಿಯ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್ ನ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ.ಆರ್ ಆಳ್ವ, ಕರ್ನಾಟಕ ರಾಜ್ಯಾಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಹಾಗೂ ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಡ ಅವರು ಹರೀಶ್ ಶೆಟ್ಟಿ ಪಡುಬಿದ್ರಿ ಅವರನ್ನು ಮಹಾರಾಷ್ಟ್ರ ರಾಜ್ಯಾಧ್ಯಕ್ಷರಾಗಿ ನೇಮಕಗೊಳಿಸಿದ್ದಾರೆ. 2028 ರಲ್ಲಿ ಶತಮಾನೋತ್ಸವದ ಅಂಗವಾಗಿ ಮಹಾರಾಷ್ಟ್ರ ರಾಜ್ಯದಲ್ಲಿ ತುಳುವ ಮಹಾಸಭೆಯ ಸಂಘಟನೆಯನ್ನು ಬಲಪಡಿಸುವುದು, ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಚಾರ, ಹೊಸ ಘಟಕಗಳ ರಚನೆ, ಯುವಜನರನ್ನು ಸಂಘಟಿಸುವುದು ಹಾಗೂ ಮಹಾರಾಷ್ಟ್ರದಾದ್ಯಂತ ತುಳುವ ಸಮುದಾಯವನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಈ ನೇಮಕ ಮಹತ್ವದ ಹೆಜ್ಜೆಯಾಗಿದೆ. ಈ ನೇಮಕವನ್ನು ತುಳು ವರ್ಲ್ಡ್ ಫೌಂಡೇಶನ್ ನ ಗೌರವಾಧ್ಯಕ್ಷ ಶ್ರೀ ಹರಿನಾರಾಯಣದಾಸ ಅಸ್ರಣ್ಣ, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ವಸಂತ ರೈ ಕುತ್ತೆತ್ತೂರು ಹಾಗೂ ನಿರ್ದೇಶಕ ಡಾ| ರಾಜೇಶ್ ಕೃಷ್ಣ ಆಳ್ವ ಅವರು ಹರ್ಷದಿಂದ ಸ್ವಾಗತಿಸಿ, ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.






















































































































