ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಹಾಗೂ ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿ -2026 ಗುರುವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾವಳಿಯನ್ನು ಬಾರ್ಕೂರು ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಶಾಂತಾರಾಮ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಶಿಕ್ಷಣದಷ್ಟೇ ಮಹತ್ವವನ್ನು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ನೀಡಬೇಕು. ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವ ಬೆಳೆಸಲು ಕ್ರೀಡೆ ಅತ್ಯಗತ್ಯ ಎಂದರು.
ಬಾರ್ಕೂರು ಎಜುಕೇಶನಲ್ ಟ್ರಸ್ಟ್ನ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ವೇದಿಕೆಯಲ್ಲಿ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಸುಜ್ಞಾನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಸುಜನ್ ನಾಯಕ್ ಉಪಸ್ಥಿತರಿದ್ದರು.







ಸಮಾರೋಪ ಸಮಾರಂಭದಲ್ಲಿ ಬಾರ್ಕೂರು ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಅವರು ವಿಜೇತ ತಂಡಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಫಲಕ ವಿತರಿಸಿದರು. ಕಾಲೇಜಿನ ಉಪನ್ಯಾಸಕ ಸುಜನ್ ನಾಯಕ್ ಸ್ವಾಗತಿಸಿದರು. ನೈನಾ ಜೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರೆ, ಅನುಪಮ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ, ವಿವಿಧ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.















































































































