ಕುಂದಾಪುರ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ‘ಡೇಟಾ ಸೈನ್ಸ್ ಕ್ಷೇತ್ರದಲ್ಲಿನ ಅವಕಾಶಗಳು’ ವಿಷಯದ ಕುರಿತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ನಡೆಯಿತು. ಯುಕೆಯ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಡೇಟಾ ಸೈಂಟಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಂದೀಪ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಡೇಟಾ ಸೈನ್ಸ್ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳು, ವೃತ್ತಿ ಬೆಳವಣಿಗೆ ಹಾಗೂ ಅಗತ್ಯ ಕೌಶಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ತಾಂತ್ರಿಕ ಜ್ಞಾನ, ಪ್ರೋಗ್ರಾಮಿಂಗ್, ದತ್ತಾಂಶ ವಿಶ್ಲೇಷಣೆ ಮತ್ತು ಸಮಸ್ಯೆ ಪರಿಹರಿಸುವ ಕೌಶಲ್ಯಗಳನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ಇದೇ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಪ್ರಶ್ನೆಗಳಿಗೆ ಉತ್ತರಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಉದ್ಯೋಗಮುಖಿ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.




ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಭರತೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಪ್ರಾಧ್ಯಾಪಕರಾದ ಮಹೇಶ್ ಪೂಜಾರಿ ಹಾಗೂ ಶ್ರೀಮತಿ ರಮ್ಯಾ ಸಿ. ಉಪಸ್ಥಿತರಿದ್ದರು. ಪ್ರಾಕ್ತನ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ದೀಪಾ ಪೂಜಾರಿ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು.












































































































