ಬ್ರಹ್ಮಾವರದ ಜಿ.ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಮಹಾನ್ ನಾಯಕರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಮಾತನಾಡಿ, ಗಾಂಧೀಜಿಯವರ ಸರಳತೆ, ಸತ್ಯ, ಅಹಿಂಸೆ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಲಾಲ್ ಬಹದ್ದೂರ್ ಶಾಸ್ತ್ರೀಯವರ ಜೈ ಜವಾನ್ ಜೈ ಕಿಸಾನ್ ಘೋಷಣೆಯಂತೆ ದೇಶವನ್ನು ಕಾಯುವ ಸೈನಿಕರನ್ನು, ಅನ್ನವನ್ನು ನೀಡುವ ಕಾಯಕಯೋಗಿ ರೈತರನ್ನು ಸದಾ ಗೌರವಿಸಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ, ಗಾಂಧೀಜಿಯ ಸಂದೇಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಳ್ಳಬೇಕೆಂದರು.
ಶಾಲಾ ಸಿಬ್ಬಂದಿವರ್ಗ ಮಹಾನ್ ನಾಯಕರ ಸಂದೇಶಗಳನ್ನು ಪಾಲಿಸಿ ಪರಿಸರ ಸಂರಕ್ಷಣೆಯನ್ನು ದೇಶದ ಸಮಗ್ರತೆಯನ್ನು ಎತ್ತಿ ಹಿಡಿಯುವುದಾಗಿ ಪ್ರತಿಜ್ಞೆ ಮಾಡಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಸಹ ಸಿಬ್ಬಂದಿವರ್ಗ, ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

















































































































