ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರ ಪುರುಷರಾದ ಕೋಟಿ ಚೆನ್ನಯರ ಹೆಸರು ನಾಮಕರಣದ ಸಮಾರಂಭ ಮಾ. 26ರಂದು ನಡೆಯಿತು. ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ ಹಾಗೂ ಶಾಸಕ ಸಂಜೀವ ಮಠಂದೂರು ನಾಮಕರಣ ಫಲಕ ಅನಾವರಣ ಮಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್, ನಗರಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್, ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿದರು. ನಿಲ್ದಾಣಕ್ಕೆ ಕೋಟಿ ಚೆನ್ನಯ ನಾಮಕರಣ ಮಾಡಲು ಕಾರಣರಾದ ಶಾಸಕ ಸಂಜೀವ ಮಠಂದೂರು ಅವರನ್ನು ಬಿಲ್ಲವ ಸಮಾಜದ ವಿವಿಧ ಸಂಘಟನೆಗಳಿಂದ ಸಮ್ಮಾನಿಸಲಾಯಿತು.
ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸಹಾಯಕ ಆಯುಕ್ತ ಗಿರೀಶ್ ನಂದನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮೀ ಅಶೋಕ್ ಶೆಣೈ, ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣ್, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ಉಪಸ್ಥಿತರಿದ್ದರು. ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಸ್ವಾಗತಿಸಿ ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ಮುರಳೀಧರ ಆಚಾರ್ಯ ವಂದಿಸಿದರು. ಉಮೇಶ್ ಶೆಟ್ಟಿ ಮತ್ತು ಮಾಧವ ಶೆಣೈ ಕಾರ್ಯಕ್ರಮ ನಿರೂಪಿಸಿದರು.